05 – ಸ್ವರ್ಗ

ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಸ್ವರ್ಗ.

ಟಾಪ್ 3 ಅತ್ಯಂತ ಮಹತ್ವದ ಪದ್ಯಗಳು

ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”

ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು. ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು. ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.

ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು. ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.

ಕ್ಯಾನೊನಿಕಲ್ ಕ್ರಮದಲ್ಲಿ ಪ್ರತಿ ವಚನ - 182 ಭಾಗಗಳು

ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.

ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.

ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.

ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು.

ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.

ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು.

“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?

ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.

ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.

ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.

ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.

ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.

ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.

ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.

ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.

ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.

ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.

ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.

ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.

ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.

ಧರ್ಮಮಾರ್ಗದಿಂದ ಜೀವಲಾಭವು, ಆ ಮಾರ್ಗದಲ್ಲಿ ಮರಣವಿಲ್ಲ.

ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.

ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು. ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.

ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು. ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು.

ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.

ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು. ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು. ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.

“ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.

ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?

“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.

ಯೆಹೋವನು, “ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಾನು ಆ ವಂಶವನ್ನು ನಿರಾಕರಿಸಿಬಿಡುವೆನು” ಎಂದು ಹೇಳುತ್ತಾನೆ.

ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು. ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು. ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.

ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.”

“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.

ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು. ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.

ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.

ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.

ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು. ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.

ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”

ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.

ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.

“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.

ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು. “ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.

ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು. ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.

ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು, “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.

ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು

“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು. ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ, ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.

“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ. ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.

“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.

‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.

ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು. ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.

ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು. ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು.

ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು.

“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.

ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.

“ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ. ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು. ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.

ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.

ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.

ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು.ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.

ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.

“ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.

ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು. ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ.ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು. ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, “ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು. ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು. ಆ ಯೌವನಸ್ಥನು ಆತನಿಗೆ, “ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?” ಎಂದು ಕೇಳಿದನು. ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.

ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. “ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು.

ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.

“ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.

ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ. ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.

ಆಗಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.

ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.

“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ. ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು. ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.

ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.

ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.

ಮತ್ತು ಅನೀತಿವಂತರಾದ ಇವರುನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.

ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.

ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ. ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.

ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು. ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ. ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು. ಅವನು ಆತನಿಗೆ, “ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ” ಎಂದು ಹೇಳಲು, ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು.

ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ. ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’

ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ. “ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.

ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.

ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.

ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು, ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು. ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು. ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು.

ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು. ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ. ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ. ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ.

ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.

ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ. ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.

ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ. ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಅಂದನು.

ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ, ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ. ‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು. ಅದಕ್ಕವನು, “ನಾನು ಬಾಲ್ಯದಿಂದಲೂ ಇವೆಲ್ಲನ್ನು ಸರಿಯಾಗಿ ಪಾಲಿಸುತ್ತಾ ಬಂದಿದ್ದೇನೆ” ಎಂದು ಹೇಳಿದನು. ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು. ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ. ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಅಂದನು. ಈ ಮಾತನ್ನು ಕೇಳಿದವರು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು?” ಎಂದು ಕೇಳಲು, ಆತನು, “ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ” ಅಂದನು.

ಆತನು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ, ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು.

“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು. ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.

ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ.ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.

ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನುಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು. ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು. ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು. ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.

ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ? ಪರಲೋಕದಿಂದ ಇಳಿದು ಬಂದವನೇ, ಅಂದರೆ,ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ. ಇದಲ್ಲದೆಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು. ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು. “ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.

ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”

ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರುಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.

ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.

ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ, ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.

ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.

ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.

ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.

ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.

ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.

ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.

ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.

ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.

ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು, ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ, ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು.

ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.

ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ! ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನುನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.

ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ,ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು. ನೀನು ಯಾರಾರನ್ನು ಕೊಟ್ಟಿದ್ದೀಯೋಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ. ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.

ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.

“‘ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಗಳಿಗೆ ಪೀಠ; ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?

ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.

ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.

ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.

ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.

ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.

ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.

ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.

ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”

ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು. ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು; ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮೀಕ ದೇಹ. ಪ್ರಾಕೃತದೇಹ ಇರುವುದಾದರೆ ಆತ್ಮೀಕ ದೇಹವೂ ಇರುವುದು ಸತ್ಯ. “ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು. ಆತ್ಮೀಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; ಅನಂತರ ಆತ್ಮೀಕವಾದದ್ದು. ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು. ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ. ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.

ಸಹೋದರರೇ, ನಾನು ಹೇಳುವುದೇನಂದರೆ, ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು. ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು. ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ. ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು. “ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?” ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ.

ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ. ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.

ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ. ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.

ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.

ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು. ಅವನು ಪರದೈಸಿ ತನಕ ಒಯ್ಯಲ್ಪಟ್ಟು ಮನುಷ್ಯರಿಂದ ಉಚ್ಚರಿಸಲೂ, ಆಡಲೂ ಬಾರದಂತಹ ಮಾತುಗಳನ್ನು ಕೇಳಿದನೆಂದೂ ಬಲ್ಲೆನು. ಆ ಸಮಯದಲ್ಲಿ ಆತನು ದೇಹಸಹಿತನಾಗಿದ್ದನೋ ಅಥವಾ ದೇಹರಹಿತನಾಗಿದ್ದನೋ ನಾನರಿಯೆನು, ದೇವರೇ ಬಲ್ಲನು.

ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.

ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.

ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.

ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ. ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು. ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.

ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ. ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.

ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.

ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ.

ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.

ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.

ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು. ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.

ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು.

ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.

ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.

ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.

ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.

ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.

ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ.

ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.

ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.

ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ. ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.

ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.

ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ, ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,

ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.

ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.

ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.

ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ. ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.

ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.

ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು. ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.

ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.

ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.

ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.

ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ. ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ. ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ.

ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.

ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.

ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ.ಯಾವನು ಜಯಹೊಂದುತ್ತಾನೋ ಅವನಿಗೆದೇವರ ಪರದೈಸಿನಲ್ಲಿರುವಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.

ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು.ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ,ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.

ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇಜಯಶಾಲಿಯಾದವನಿಗೆನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.

ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, “ಇಲ್ಲಿಗೆ ಏರಿ ಬಾ,ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು. ಕೂಡಲೆ ನಾನು ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು. ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು. ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.

ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು. ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು. ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.

ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.

ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.” ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.

ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು. ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು. ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು, “ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.

ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು. ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ. ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.

ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.

ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು. ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.

ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.

ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.

ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ. ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು. ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.

ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು. ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು. ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು. ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು. ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ,

ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು. ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು. ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು. ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.

ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು. ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು. ಅವನು ಅದರ ಗೋಡೆಯನ್ನು ಅಳತೆ ಮಾಡಿದನು. ಅದು ನೂರನಲ್ವತ್ತು ನಾಲ್ಕು ಮೊಳವಾಗಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಎಂದರೆ ದೇವದೂತನ ಮೊಳ. ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೆಯದು ಪದ್ಮರಾಗ, ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲಸ್ಫಟಿಕ, ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.

ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ. ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು. ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು. ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ ರಾತ್ರಿಯಂತೂ ಇಲ್ಲವೇ ಇಲ್ಲ. ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು. ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.

ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು, ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು. ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು. ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು. ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.

“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆಜೀವವೃಕ್ಷದ ಹಕ್ಕು ಇರುವುದು.ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.

ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.

Kannada - ಕನ್ನಡ - KN

KNIRV'19 - Kannada Indian Revised Version - 2019

This Bible text is from Kannada Indian Revised Version IRV 2019
https://open.bible/bibles/kannada-bridge-text-bible/
provided by: Bridge Connectivity Solutions Pvt Ltd, available by Creative Commons CC-BY-SA-4.0,
and this new compilation is shared as www.creativecommons.org/licenses/by-sa/4.0.
Languages are made available to you by www.ipedge.net